ಕಲಬುರಗಿ,26.ಮಾ.25.-ಕೌಶಲ್ಯಾಭಿವೃದ್ಧಿ ನಿಗಮದಿಂದ 2025ರ ಏಪ್ರಿಲ್ ತಿಂಗಳಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಆಯೋಜಿಸುತ್ತಿರುವ ಬೃಹತ್ ಉದ್ಯೋಗ ಮೇಳಕ್ಕೆ ಸಂಬಧಿಸಿದತೆ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಹಾಗೂ ಇತರೆ ಜಿಲ್ಲೆಯ ಅಭ್ಯರ್ಥಿಗಳಿಗೆ ಉದ್ಯೋಗ ಮೇಳದ ಕುರಿತು ಅರಿವು ಮೂಡಿಸಲು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೋಸ್ಟರ್ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗೂಬಾಯಿ ಪಿ. ಸೂರ್ಯವಂಶಿ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಹಾಗೂ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಉಪಸ್ಥಿತರಿದ್ದರು.
ಈ ಬೃಹತ್ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಸುಮಾರು 250 ಕಂಪನಿಗಳು ಮತ್ತು ಸ್ಥಳೀಯ ಉದ್ಯೋಗ ನೀಡುವ ಕಂಪನಿಗಳು ಭಾಗವಹಿಸಲಿವೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಅಭ್ಯರ್ಥಿಗಳನ್ನು ಒಳಗೊಂಡತೆ ಇತರೆ ಜಿಲ್ಲೆಯ ಸುಮಾರು 20,000 ಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ.
ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಸ್ಕಿಲ್ ಕನೆಕ್ಟ್ ಪೋರ್ಟಲ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ರಜಿಸ್ಟರ್ ಮೇಲೆ ಕ್ಲಿಕ https://skillconnect.kaushalkar.com ಮಾಡಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಬೆಂಗಳೂರು, ಜಿಲ್ಲಾಡಳಿತ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಕಲಬುರಗಿ ಇವುಗಳ ಸಹಯೋಗದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಮಾನ್ಯ ಡಾ|| ಶರಣ ಪ್ರಕಾಶ ಪಾಟೀಲ್ ಇವರ ಅಧ್ಯಕ್ಷತೆಯಲ್ಲಿ ಈ ಬೃಹತ್ ಉದ್ಯೋಗ ಮೇಳ-2025 ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಕೌಶಲ್ಯ ಮೀಷನ್‌ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.